Belagavi News:
ಬೆಂಗಳೂರು: ರಾಜ್ಯದಲ್ಲಿ ಸಮುದಾಯವಾರು ಅನುದಾನ ಹಂಚಿಕೆಯಲ್ಲಿ ಯಾವುದೇ ಉದ್ದೇಶಪೂರ್ವಕ ತಾರತಮ್ಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅನುದಾನ ಬಿಡುಗಡೆ ಕುರಿತಾಗಿ ಕೇಳಿ ಬಂದಿರುವ ಆರೋಪಿಗಳಿಗೆ ಪ್ರತಿಕ್ರಿಸಿದ ಅವರು, ಇಲಾಖೆಗೆ ಸಲ್ಲಿಕೆಯಾಗಿದ್ದ ಮನವಿಗಳ ಸಂಖ್ಯೆಯನ್ನು ಆಧರಿಸಿ ಪೂರ್ವಭಾವಿ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳು ಸಲ್ಲಿಸಿದ್ದ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ- ಸಂಸ್ಥೆಗಳಿಗೆ 71.85 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇಪ್ಪತ್ತು ಅಂತಿಮ ಫಲಾನುಭವಿಗಳ ಪಟ್ಟಿ ಅಲ್ಲ ಎಂದು ಸ್ಪಷ್ಟಪಡಿಸಿದ ಅವರು, ವಿವಿಧ ಹಿಂದುಳಿದ ಜಾತಿಗಳಿಂದ ಬಂದಿರುವ ಇತರೆ ಮನವಿಗಳನ್ನು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಸಂದಾಯವಾಗಿರುವ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ಇಲಾಖೆಗೆ ಸಲ್ಲಿಕೆಯಾಗಿದ್ದ ಮನವಿಗಳಲ್ಲಿ ಕುರುಬ ಸಮುದಾಯದ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದ ಕಾರಣದಿಂದ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಮಂಜೂರಾಗಿದೆ. ಇದನ್ನು ತಾರತಮ್ಯ ಎಂದು ಬಿಂಬಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಇದಲ್ಲದೆ, ಕುರುಬ ಸಮುದಾಯದ ಜೊತೆಗೆ ಮಡಿವಾಳ, ಲಿಂಗಾಯತ, ಒಕ್ಕಲಿಗ, ಬೆಸ್ತ, ಬಲಿಜ, ಗೊಲ್ಲ, ಜೆಟ್ಟಿ, ಕುಂಬಾರ, ಅರಸು, ಹೆಳವ, ಸವಿತಾ ಸಮಾಜ, ಉಪ್ಪಾರ, ಗಾಣಿಗ, ಕುರುಹಿನ ಶೆಟ್ಟಿ, ಹಾಲಕ್ಕಿ ಹಾಗೂ ರೆಡ್ಡಿ ಸಮುದಾಯಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಆದೇಶ ಹೊರಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅನುದಾನ ಹಂಚಿಕೆ ಪ್ರಕ್ರಿಯೆ ಪಾರದರ್ಶಕವಾಗಿದ್ದು, ಎಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಅನುದಾನ ಪಡೆಯಲು ಸಂಘ-ಸಂಸ್ಥೆಗಳು ಸಂಬಂಧಿಸಿದ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಅಗತ್ಯ ದಾಖಲೆಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕಾಗುತ್ತದೆ. ಜಮೀನು ಅಥವಾ ನಿವೇಶನ ಸಂಘದ ಹೆಸರಿನಲ್ಲಿ ಇರುವ ದಾಖಲೆ, ಸ್ಥಳೀಯ ಪುರಸಭೆ ಅಥವಾ ಗ್ರಾಮ ಪಂಚಾಯಿತಿಯಿಂದ ಕಟ್ಟಡ ನಿರ್ಮಾಣ ಪರವಾನಗಿ, ಸಂಘದ ಕಳೆದ ಮೂರು ವರ್ಷಗಳ ಆಡಿಟ್ ವರದಿ ಸೇರಿದಂತೆ ವಿವಿಧ ದಾಖಲೆಗಳ ಪರಿಶೀಲನೆಯ ಬಳಿಕವೇ ಅನುದಾನ ಬಿಡುಗಡೆ ಪ್ರಕ್ರಿಯೆ ಮುಂದುವರಿಯುತ್ತದೆ ಎಂದು ಅವರು ವಿವರಿಸಿದ್ದಾರೆ.
ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೆ ಸಂಬಂಧಿಸಿದ ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಿದ್ದು. ಕಾಮಗಾರಿಯ ಪ್ರಗತಿಯನ್ನು ಆಧರಿಸಿ ಮೂರು ಹಂತಗಳಲ್ಲಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಪ್ರತಿ ವರ್ಷ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿ, ಅದರ ಆಧಾರದ ಮೇಲೆ ಮಂಜೂರಾದ ಮೊತ್ತವನ್ನು ಹಂತ ಹಂತವಾಗಿ ಬಿಡುಗಡೆ ಮಾಡುವ ವ್ಯವಸ್ಥೆ ಜಾರಿಯಲ್ಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದು ನಿರಂತರ ಪ್ರಕ್ರಿಯೆಯಾಗಿದ್ದು, ಸರ್ಕಾರದ ಆದೇಶದ ಪ್ರಕಾರ ಪ್ರವರ್ಗ-1 ಮತ್ತು ಪ್ರವರ್ಗ-2A ಜಾತಿಗಳಿಗೆ ಶೇ.70ರಷ್ಟು ಹಾಗೂ ಪ್ರವರ್ಗ-3A ಮತ್ತು ಪ್ರವರ್ಗ-3B ಜಾತಿಗಳಿಗೆ ಶೇ.30 ರಷ್ಟು ಅನುದಾನ ಮೀಸಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಪ್ರವರ್ಗ-1ಮತ್ತು 2A ವಿಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯ ಜಾತಿಗಳು ಒಳಗೊಂಡಿರುವುದರಿಂದ ಕೆಲವು ಸಮುದಾಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಮಂಜುರಾಗಿರುವಂತೆ ಕಂಡುಬಂದಿದೆ. ಆದರೆ ಇದು ಯಾವುದೇ ಉದ್ದೇಶಪೂರ್ವಕ ತಾರತಮ್ಯದ ಫಲವಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಅನುದಾನ ಹಂಚಿಕೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು. ಸರ್ಕಾರದ ಮಾರ್ಗ ಸೂಚಿಗಳು ಹಾಗೂ ಅರ್ಹತಾ ಮಾನದಂಡಗಳ ಆಧಾರದ ಮೇಲೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಪುನರುಚ್ಚರಿಸಿದ್ದಾರೆ.
Also Read:
ಕರ್ನಾಟಕ ಅಭಿವೃದ್ಧಿ ಯೋಜನೆಗಳಿಗೆ ವಿಶೇಷ ಅನುದಾನ ನೀಡಿ: ಕೇಂದ್ರ ವಿತ್ತ ಸಚಿವರಿಗೆ ಸಿಎಂ ಡಿಕೆಶಿ ಮನವಿ