BELAGAVI NEWS :
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ "ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)" ಪ್ರಕ್ರಿಯೆ ಕುರಿತು ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ಎಸ್ ಐಆರ್ ಪ್ರಕ್ರಿಯೆಯಲ್ಲಿ ವ್ಯಾಪಕ ಆಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಈ ಕುರಿತು ಸೋಮವಾರ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.
ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸದೇ ಎಸ್ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಬಿಜೆಪಿ- ಜೆಡಿಎಸ್ ಮೈತ್ರಿ ನಾಯಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಹಾಗೂ ನಿಯಮ ಪಾಲನೆಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿರುವ ಅವರು, ಪ್ರಕ್ರಿಯೆಯಲ್ಲಿನ ಲೋಪಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ಚುನಾವಣಾ ಅಧಿಕಾರಿಯನ್ನು ಒತ್ತಾಯಿಸಿದ್ದಾರೆ.
ಈ ಬೆಳವಣಿಗೆ ರಾಜ್ಯದ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಎಸ್ಐಆರ್ ಪ್ರಕ್ರಿಯೆ ಇದೀಗ ಮತ್ತೊಮ್ಮೆ ವಿವಾದದ ಕೇಂದ್ರ ಬಿಂದುವಾಗಿದೆ.
ಮನೆ ಮನೆ ಸಮೀಕ್ಷೆ ಬದಲು ಸಾಮೂಹಿಕ ನೋಂದಣಿ? ಬಿಜೆಪಿ-ಜೆಡಿಎಸ್ ಗಂಭೀರ ಆರೋಪ
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ SIR ಪ್ರಕ್ರಿಯೆಯಲ್ಲಿ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಬೇಕಾದ ನಿಯಮವನ್ನು ಹಲವೆಡೆ ಪಾಲಿಸಲಾಗುತ್ತಿಲ್ಲ ಎಂದು ಬಿಜೆಪಿ ಮತ್ತು ಜೆಡಿಎಸ್ ಆರೋಪಿಸಿವೆ. ಅದರ ಬದಲಾಗಿ, ಕೆಲವು ಪ್ರದೇಶಗಳಲ್ಲಿ ಮಸೀದಿಗಳು, ಚೌಲ್ಟ್ರಿಗಳು ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕವಾಗಿ ನೋಂದಣಿ ಮತ್ತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದರ ಜೊತೆಗೆ, ಅನರ್ಹರನ್ನು ಮತದಾರರ ಪಟ್ಟಿಗೆ ಸೇರಿಸುವ ಉದ್ದೇಶದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗುತ್ತಿದೆ. ಅಲ್ಲದೆ, ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲೆ ಒತ್ತಡ ಹೇರಿ ನಿಯಮ ಉಲ್ಲಂಘಿಸುವಂತೆ ಮಾಡಲಾಗುತ್ತಿದೆ ಎಂಬ ಗಂಭೀರ ಆರಪವನ್ನು ಮೈತ್ರಿ ನಾಯಕರು ಮಾಡಿದ್ದಾರೆ.
ಈ ರೀತಿಯ ಕ್ರಮಗಳು, "ರಾಮನಗರ, ಯಶವಂತಪುರ, ಜಯನಗರ, ಇಂಡಿ, ಕುಣಿಗಲ್ ,ಪಾವಗಡ" ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಂಡುಬಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಪಾರದರ್ಶಕವಾಗಿ ನಡೆಸುವಂತೆ ಬಿಜೆಪಿ ಮತ್ತು ಜೆಡಿಎಸ್ ಮುಖ್ಯ ಚುನಾವಣಾ ಅಧಿಕಾರಿಯನ್ನು ಆಗ್ರಹಿಸಿವೆ.
ಸಾಮೂಹಿಕವಾಗಿ ನಡೆಸಲಾಗಿದೆ ಎಂದು ಆರೋಪಿಸಲಾಗಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗಳನ್ನು ತಕ್ಷಣವೇ ರದ್ದುಗೊಳಿಸಿ, ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಹೊಸದಾಗಿ ಪಾರದರ್ಶಕ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ಪರಿಷ್ಕರಣೆ ನಡೆಸಬೇಕು ಎಂದು ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಮುಖ್ಯ ಚುನಾವಣಾ ಅಧಿಕಾರಿಗೆ ಮನವಿ ಮಾಡಿದ್ದಾರೆ.
ಅಗತ್ಯವಿದ್ದರೆ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಯನ್ನು ಕಾಪಾಡಲು ಹೊರ ರಾಜ್ಯಗಳ ಅಧಿಕಾರಿಗಳನ್ನು ನಿಯೋಜಿಸುವಂತೆ ಕೂಡ ಅವರು ಒತ್ತಾಯಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಯಾವುದೇ ಅನುಮಾನಕ್ಕೆ ಎಡೆ ಮಾಡಿಕೊಡದ ರೀತಿಯಲ್ಲಿ ನಡೆಯಬೇಕು ಎಂದು ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ ಬಿಜೆಪಿ -ಜೆಡಿಎಸ್ ನಿಯೋಗದಲ್ಲಿ ಕೇಂದ್ರ ಸಚಿವರಾದ ಎಚ್ .ಡಿ. ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ .ಅಶೋಕ್ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ SIR ಪ್ರಕ್ರಿಯೆ ಕುರಿತ ಚರ್ಚೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.