Belagavi News :
ಮೆಲ್ಬೋರ್ನ್ (ಆಸ್ಟ್ರೇಲಿಯಾ): ಮೂರು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾ ಭೇಟಿಯನ್ನು ಪೂರ್ಣಗೊಳಿಸಿದ್ದು, ಇದೀಗ ಪ್ರವಾಸದ ಅಂತಿಮ ಹಂತವಾಗಿ ನ್ಯೂಜಿನ್ಯಾಂಡ್ ಗೆ ತೆರಳಿದ್ದಾರೆ.
ಆಸ್ಟ್ರೇಲಿಯಾದಿಂದ ನಿರ್ಗಮಿಸುವ ಮುನ್ನ ಪ್ರಧಾನಿ ಮೋದಿ ಹೇಳಿಕೆ ಬಿಡುಗಡೆ ಮಾಡಿದ್ದು, ಆಸ್ಟ್ರೇಲಿಯಾ ಸರ್ಕಾರ, ಅಲ್ಲಿನ ಜನತೆ ಹಾಗೂ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ನೀಡಿದ ಆತ್ಮೀಯ ಸ್ವಾಗತಕ್ಕೆ ಧನ್ಯವಾದ ತಿಳಿಸಿದ್ದಾರೆ. ಈ ಭೇಟಿ ಭಾರತ- ಆಸ್ಟ್ರೇಲಿಯಾ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಹಕಾರದ ಹೊಸ ಅವಕಾಶಗಳನ್ನು ತೆರೆದಿದೆ ಎಂದು ಹೇಳಿದ್ದಾರೆ.
ಆಸ್ಟ್ರೇಲಿಯಾ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರು ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಬೀಳ್ಕೊಟ್ಟರು. ಈ ಕುರಿತು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ಭಾರತ-ಆಸ್ಟ್ರೇಲಿಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಯಶಸ್ವಿಯಾಗಿದೆ ಎಂದು ತಿಳಿಸಿದೆ.
ರಕ್ಷಣಾ ಸಹಕಾರ, ಆರ್ಥಿಕ ಸಂಪರ್ಕ, ಶಿಕ್ಷಣ, ಕ್ರೀಡೆ ಹಾಗೂ ಸಮುದಾಯ ಸಂಬಂಧ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಎರಡು ದೇಶಗಳ ನಡುವಿನ ಸಹಕಾರಕ್ಕೆ ಈ ಭೇಟಿ ಹೊಸ ದಾರಿ ತೆರೆದಿದೆ ಎಂದು ಸಚಿವಾಲಯ ಹೇಳಿದೆ.
ಇದೀಗ ಪ್ರಧಾನಿ ಮೋದಿ ಅವರು ನ್ಯೂಜಿಲ್ಯಾಂಡ್ ನ ಆಕ್ಲೆಂಡ್ ಗೆ ಪ್ರಯಾಣ ಬೆಳೆಸಿದ್ದಾರೆ. ನ್ಯೂಜಿಲ್ಯಾಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಈ ಭೇಟಿ ನಡೆಯುತ್ತಿದ್ದು, ದ್ವಿಪಕ್ಷೀಯ ಸಂಬಂಧಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಬಳಿಕ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡುವ ಕಾರ್ಯಕ್ರಮವು ಇದೆ.
2025ರ ಮಾರ್ಚ್ ನಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ನ್ಯೂಜಿಲ್ಯಾಂಡ್ ಪ್ರಧಾನಿ ಲಕ್ಸನ್, ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ವಾಣಿಜ್ಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದರು.