Belagavi News:
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ "ಗೃಹಲಕ್ಷ್ಮಿ" ಯೋಜನೆಯಡಿ ಬಾಕಿ ಉಳಿದಿರುವ ಮಾಸಿಕ ಕಂತುಗಳನ್ನು ತಕ್ಷಣ ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ ಆರ್. ಗಂಗಾ ಹಾಗೂ ಜಿ.ಡಿ. ಪವಿತ್ರಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜು ಮತ್ತು ನ್ಯಾಯಮೂರ್ತಿ ಕೆ. ಮನ್ಮಧರಾವ್ ಅವರಿದ್ದ ವಿಭಾಗೀಯ ಪೀಠ ನಡೆಸಿತು. ವಿಚಾರಣೆ ಬಳಿಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದ ಪೀಠ, ಮುಂದಿನ ವಿಚಾರಣೆಗೆ ದಿನಾಂಕ ನಿಗದಿ ಮಾಡಿ ಪ್ರಕರಣವನ್ನು ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಗೃಹಲಕ್ಷ್ಮಿ ಯೋಜನೆಯನ್ನು ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಬಹಳವಾಗಿ ಅವಲಂಬಿಸಿಕೊಂಡಿದ್ದಾರೆ. ಹಲವು ತಿಂಗಳುಗಳಿಂದ ಕಂತುಗಳ ಹಣ ಬಿಡುಗಡೆಯಾಗದ ಕಾರಣ ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಯೋಜನೆಯಡಿ ಬಾಕಿ ಉಳಿದಿರುವ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅವರು ನ್ಯಾಯಪೀಠವನ್ನು ಮನವಿ ಮಾಡಿದರು. ಸರ್ಕಾರದ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಕೆಯಾದ ಬಳಿಕ ಹೈಕೋರ್ಟ್ ಮುಂದಿನ ಹಂತದ ವಿಚಾರಣೆ ನಡೆಸಲಿದೆ.
ಅರ್ಜಿಯಲ್ಲೇನಿದೆ ?
ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, 2024-25ನೇ ಆರ್ಥಿಕ ವರ್ಷದ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತುಗಳು ಅನೇಕ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ ಎಂದು ಉಲ್ಲೇಖಿಸಲಾಗಿದೆ. ಆಡಳಿತಾತ್ಮಕ ವರ್ಗಾವಣೆ ಮತ್ತು ತಾಂತ್ರಿಕ ಕಾರಣಗಳಿಂದ ಸುಮಾರು ₹5,000 ಕೋಟಿ ಸಾರ್ವಜನಿಕ ಹಣ ಲ್ಯಾಪ್ಸ್ ಆಗಿದೆ ಎಂಬ ಗಂಭೀರ ಆರೋಪವನ್ನು ಅರ್ಜಿದಾರರ ಮಾಡಿದ್ದಾರೆ.
ಇದಲ್ಲದೆ, ಗೃಹಲಕ್ಷ್ಮಿ ಯೋಜನೆಯ ಕಂತುಗಳ ಬಿಡುಗಡೆ ವಿಳಂಬವಾಗಿರುವುದು ಹಾಗೂ ತಾಂತ್ರಿಕ ದೋಷಗಳು ಉಂಟಾಗಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ವಿಧಾನಸಭೆಯಲ್ಲಿಯೇ ಸ್ಪಷ್ಟನೆ ನೀಡಿರುವುದನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಎಲ್ಲಾ ಕಂತುಗಳ ಹಣವನ್ನು ಶೀಘ್ರವಾಗಿ ಫಲಾನುಭವಿಗಳ ಖಾತೆಗಳಿಗೆ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.
ಪ್ರಕರಣದ ಹಿನ್ನೆಲೆ: ಕಳೆದ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಕುಟುಂಬದ ಮುಖ್ಯಸ್ಥರಾಗಿರುವ ಮಹಿಳೆಗೆ ಪ್ರತಿ ತಿಂಗಳು 2,000 ನೀಡುವ ಸಂಬಂಧ ಘೋಷಣೆ ಮಾಡಲಾಗಿತ್ತು. ಈ ಯೋಜನೆಯನ್ನು 2023ರ ಜೂನ್ ತಿಂಗಳಿನಿಂದ ಅಧಿಕೃತವಾಗಿ ಜಾರಿಗೆ ಬಂದಿತು. ರಾಜ್ಯದಲ್ಲಿ ಒಟ್ಟು 1.28 ಕೋಟಿಗೂ ಹೆಚ್ಚು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಈ ಯೋಜನೆಯಡಿ ನೊಂದಾಯಿಸಿಕೊಂಡಿದ್ದು, ಯೋಜನೆಗೆ ಈವರೆಗೂ ಸುಮಾರು 52,416.17 ಕೋಟಿ ಹಣವನ್ನು ವೆಚ್ಚ ಮಾಡಲಾಗಿದೆ.
ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಹಣ ಬಾಕಿ ಗದ್ದಲ: ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ವಿಚಾರವು ವಿಧಾನಸಭೆಯಲ್ಲಿಯೂ ಭಾರಿ ಗದ್ದಲ, ಕೋಲಾಹಲ ಸೃಷ್ಟಿಸಿತ್ತು. ಕೊನೆಗೂ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ಬಂದು ವಿಷಾದ ಮತ್ತು ಕ್ಷಮೆ ಕೇಳಿದ್ದರು. ಅಲ್ಲದೆ, ಎರಡು ತಿಂಗಳ ಗೃಹಲಕ್ಷ್ಮಿ ಬಾಕಿ ವ್ಯತ್ಯಯದ ಬಗ್ಗೆಯೂ ಸದನದಲ್ಲಿ ಸಚಿವರು ಒಪ್ಪಿಕೊಂಡಿದ್ದರು ಸಚಿವರು ಒಪ್ಪಿಕೊಂಡಿದ್ದರು.
Also Read:
Siddaramaiah questions petrol price hike: Should we reduce it if the Centre increases it?