BLAGAVI NEWS :
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು ತುರ್ತು ರಜೆ ಘೋಷಿಸಿದೆ
ಜಿಲ್ಲಾಧಿಕಾರಿಗಳು ಹೊರಡಿಸಿರುವ ಅಧಿಕೃತ ಆದೇಶದ ಪ್ರಕಾರ, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರಿಗೆ ಅಗತ್ಯವಿಲ್ಲದ ಹೊರಾಂಗಣ ಸಂಚಾರವನ್ನು ತಪ್ಪಿಸಲು, ನದಿ,ಹೊಳೆ ಮತ್ತು ತಗ್ಗು ಪ್ರದೇಶಗಳ ಬಳಿ ತೆರಳದಂತೆ ಎಚ್ಚರಿಕೆ ನೀಡಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಜಿಲ್ಲಾಡಳಿತದ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ದಕ್ಷಿಣ ಕನ್ನಡದಲ್ಲಿ ಮುಂದಿನ ಕೆಲವು ದಿನಗಳವರೆಗೆ ಬಾರಿ ಮಳೆಯ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ನೀಡುವ ಹಿನ್ನೆಲೆ ಮುನ್ಸೂಚನೆಗಳು ಮತ್ತು ಜಿಲ್ಲಾಡಳಿತದ ಪ್ರಕಟಣೆಗಳನ್ನು ಗಮನಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಂತೆ, ಈ ಸೂಚನೆಯನ್ನು ಯಾವುದೇ ಶಿಕ್ಷಣ ಸಂಸ್ಥೆ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ - 2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಪೋಷಕರು ಮತ್ತು ಸಾರ್ವಜನಿಕರಿಗೆ ಮಹತ್ವದ ಸೂಚನೆಗಳು
ಭಾರಿ ಮಳೆಯ ಹಿನ್ನೆಲೆ ಮಕ್ಕಳ ಸುರಕ್ಷತೆಗೆ ಪೋಷಕರು ವಿಶೇಷ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿ ತೀರ ಹಾಗೂ ಸಮುದ್ರ ತೀರಗಳಿಗೆ ಮಕ್ಕಳು ಹೋಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಇದೆ ವೇಳೆ, ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ನಿರ್ಬಂಧ ವಿಧಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಮತ್ತು ಪ್ರತಿಕೂಲ ಹವಾಮಾನ ಇರುವ ಕಾರಣ ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಸಿಗರು ಮತ್ತು ಸಾರ್ವಜನಿಕರು ಕೂಡ ನದಿ ತೀರ, ಸಮುದ್ರ ತೀರ ಹಾಗೂ ಅಪಾಯದ ಪ್ರದೇಶಗಳಿಗೆ ಭೇಟಿ ನೀಡದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಹವಾಮಾನ ಇಲಾಖೆಯ ಮುಂದಿನ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.
ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಆದೇಶ
ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಯಾವುದೇ ಲೋಪವಿಲ್ಲದೆ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ, ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ನಿರ್ದೇಶಿಸಲಾಗಿದೆ.
ಇದೇ ವೇಳೆ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಪರಿಸ್ಥಿತಿಯಲ್ಲಿ ಇರಿಸಲಾಗಿದೆ.
ತುರ್ತು ಸಹಾಯ ವಾಣಿ ಸಂಖ್ಯೆಗಳು
ನೈಸರ್ಗಿಕ ವಿಕೋಪ ಅಥವಾ ಭಾರಿ ಮಳೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ತಕ್ಷಣವೇ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು.
ಟೋಲ್ ಫ್ರೀ ಸಂಖ್ಯೆ : 1077
ದೂರವಾಣಿ ಸಂಖ್ಯೆ:0824-2442590