Belagavi News:
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆಯ ತೀವ್ರತೆ ಹೆಚ್ಚುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಜೊತೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕೂಡ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.
ಇದೆ ವೇಳೆ ಮಳೆನಾಡು ಮತ್ತು ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಚಿಕ್ಕಮಂಗಳೂರು, ಕೋಲಾರ್, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಗದಗ್ ಮತ್ತು ಹಾವೇರಿ ಜಿಲ್ಲೆಗಳಲ್ಲಿಯೂ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದ್ದು ಮುನ್ನೆಚ್ಚರಿಕೆಗೆ ಕ್ರಮವಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆಯ ಸೂಚನೆಯಂತೆ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.
ಇನ್ನೊಂದೆಡೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವೇಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಬಿರುಸು ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ನಿವಾಸಿಗಳು ರೈತರು ಹಾಗೂ ಮೀನುಗಾರರು ವಿಶೇಷ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.🌧️⚠️
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತವು ಸಾರ್ವಜನಿಕರಿಗೆ ಹೈ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ಜೂನ್ 9 ರಿಂದ 11ರವರೆಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಆರೆಂಜ್ ಅಲರ್ಟ್ ಹಾಗೂ ಜೂನ್ 10 ಮತ್ತು 11 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಹಾಗೂ ಸಂಬಂಧಿತ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ವಿಶೇಷವಾಗಿ ನದಿ ಪಾತ್ರದ ಪ್ರದೇಶಗಳಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಪರಿಸ್ಥಿತಿಯ ಮೇಲೆ ನಿಗಾ ಇರಿಸಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನದಿಗಳು, ಹಳ್ಳಗಳು, ಕೆರೆಗಳು ಮತ್ತು ಜಲಾಶಯಗಳ ಸಮೀಪ ಅನಗತ್ಯವಾಗಿ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ನೀರಿನ ಹರಿವು ಹೆಚ್ಚಾಗುವ ಸಂದರ್ಭಗಳಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ನೀರಿಗೆ ಇಳಿಯುವುದನ್ನು ಸಂಪೂರ್ಣವಾಗಿ ತಪ್ಪಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಕರಾವಳಿ, ಮಲೆನಾಡು ಮತ್ತು ಮಳೆಯ ತೀವ್ರತೆ ಹೆಚ್ಚಾಗುವ ಪ್ರದೇಶಗಳಲ್ಲಿ ಪ್ರವಾಹ, ರಸ್ತೆ ಜಲಾವೃತ, ಮರಗಳು ಉರುಳುವುದು ಹಾಗೂ ಭೂಕುಸಿತದಂತಹ ಘಟನೆಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ನಿರಂತರವಾಗಿ ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ತುರ್ತು ಪರಿಸ್ಥಿತಿ ಎದುರಾದಲ್ಲಿ ಸ್ಥಳೀಯ ಆಡಳಿತ ಮತ್ತು ವಿಪತ್ತು ನಿರ್ವಹಣಾ ತಂಡಗಳೊಂದಿಗೆ ಸಂಪರ್ಕದಲ್ಲಿದ್ದು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಭಾರಿ ಮಳೆಯ ಅವಧಿಯಲ್ಲಿ ಅನಗತ್ಯ ಪ್ರಯಾಣವನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಮನವಿ ಮಾಡಲಾಗಿದೆ. 🌧️⚠️
Also Read: