BELAGAVI NEWS :
ಚಿಕ್ಕೋಡಿ (ಬೆಳಗಾವಿ): ರಾಜ್ಯದ ಜನರ ಆಶೀರ್ವಾದ ಮತ್ತು ಬೆಂಬಲ ಸಿಕ್ಕರೆ 2028ರ ವಿಧಾನಸಭಾ ಚುನಾವಣೆಯ ಬಳಿಕ ನಮ್ಮ ತಂದೆ, ಸಚಿವ ಸತೀಶ್ ಜಾರಕಿಹೊಳಿ ಅವರು ಕರ್ನಾಟಕದ ಮುಖ್ಯಮಂತ್ರಿ ಆಗುವುದು ಖಂಡಿತ ಸಾಧ್ಯ,"ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಖಾಸಗಿ ಮಾಧ್ಯಮ ಒಂದರಲ್ಲಿ ಮಾತನಾಡಿದ ಅವರು, "2028ರ ಚುನಾವಣೆಯಲ್ಲಿ ಜನರು ಹಾಗೂ ಪಕ್ಷದ ಬೆಂಬಲ ದೊರೆತರೆ ನಮ್ಮ ತಂದೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ ಎಂಬ ನಂಬಿಕೆ ಇದೆ," ಎಂದು ಹೇಳಿದರು. ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಹುದ್ದೆಯ ಕುರಿತು ಚರ್ಚೆಗೆ ಹೊಸ ತಿರುವು ನೀಡಿದೆ.
ಇದೇ ವೇಳೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಪ್ರಿಯಾಂಕಾ ಜಾರಕಿಹೊಳಿ ತಿಳಿಸಿದರು. ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಟಿಎಸ್ ಪಿ (TSP) ಯೋಜನೆಯಡಿ ಸಿಸಿ ರಸ್ತೆಗಳ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು. ಕ್ಷೇತ್ರದ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾಮಗಾರಿಗಳನ್ನು ವೇಗವಾಗಿ ಅನುಷ್ಠಾನಗೊಳಿಸುವ ಸಂಕಲ್ಪವನ್ನು ಅವರು ವ್ಯಕ್ತಪಡಿಸಿದರು.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಬರಗಾಲ ನಿರ್ವಹಣೆಗೆ ಕೇಂದ್ರದ ಮೊರೆ:
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಎದುರಾಗಿರುವ ಬರಗಾಲದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಕೇಂದ್ರ ಸರ್ಕಾರ ನೆರವು ಕೋರಲಾಗುವುದು ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ತಿಳಿಸಿದ್ದಾರೆ. ಬರಪೀಡಿತ ಪ್ರದೇಶಗಳ ಸಮಸ್ಯೆಗಳ ಕುರಿತು ಕೇಂದ್ರದ ಗಮನ ಸೆಳೆಯಲು ಅಗತ್ಯ ಪತ್ರಗಳನ್ನು ಬರೆಯುವುದಾಗಿ ಅವರು ಹೇಳಿದರು.
ಇದೇ ವೇಳೆ, ಕಳೆದ ಒಂದು ದಶಕದಿಂದ ನೆನೆಗುದಿಗೆ ಬಿದ್ದಿರುವ ಶೇಡಬಾಳ- ವಿಜಯಪುರ ನೂತನ ರೈಲು ಮಾರ್ಗ ಯೋಜನೆಗೆ ವೇಗ ನೀಡುವ ಭರವಸೆಯನ್ನು ಅವರು ನೀಡಿದರು. ಈ ಯೋಜನೆಗೆ ಡಿಪಿಆರ್ ಸಿದ್ದವಾಗಿದ್ದರೂ ಯಾವುದೇ ಪ್ರಗತಿ ಕಾಣದ ಹಿನ್ನೆಲೆಯಲ್ಲಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ನೇರವಾಗಿ ಭೇಟಿ ಮಾಡಿ ಯೋಜನೆ ಅನುಷ್ಠಾನದ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು. ಈ ವಿಷಯವನ್ನು ಈಗಾಗಲೇ ಸಂಸತ್ತಿನಲ್ಲೂ ಪ್ರಸ್ತಾಪಿಸಲಾಗಿದ್ದರು ನಿರೀಕ್ಷಿತ ಸ್ಪಂದನೆ ಸಿಗದ ಕಾರಣ ಮತ್ತೊಮ್ಮೆ ಕೇಂದ್ರದ ಮಟ್ಟದಲ್ಲಿ ಒತ್ತಡ ತರಲಾಗುವುದು ಎಂದು ಹೇಳಿದರು.
ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಕಾಂಗ್ರೆಸ್ ಚುನಾವಣೆಯನ್ನು ಎದುರಿಸಲಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಉಲ್ಲೇಖಿಸಿದರು. ಅಭಿವೃದ್ಧಿ ಮತ್ತು ಜನಪರ ಯೋಜನೆಗಳಿಗೆ ಆದ್ಯತೆ ನೀಡುವ ಮೂಲಕ ಕ್ಷೇತ್ರದ ಸಮಗ್ರ ಬೆಳವಣಿಗೆಗೆ ಬದ್ಧರಾಗಿರುವುದಾಗಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.