BELAGAVI NEWS :
ಮೈಸೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿತರಾಗಿದ್ದ 13,677 ಫಲಾನುಭವಿಗಳು ಮೃತಪಟ್ಟಿರುವ ಮಾಹಿತಿ ಪ್ರಗತಿ ಪರಿಶೀಲನ ಸಭೆಯಲ್ಲಿ ಬಹಿರಂಗವಾಗಿದೆ. ಜಿಲ್ಲಾ ಪಂಚಾಯತ್ ನ ಡಿ. ದೇವರಾಜ್ ಅರಸು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು ಈ ಮಾಹಿತಿ ನೀಡಿದರು.
ಜಿಲ್ಲೆಯಾದ್ಯಂತ ಮೃತ ಫಲಾನುಭವಿಗಳ ವಿವರಗಳನ್ನು ದೃಢಕರಿಸಲು ಅಂಗನವಾಡಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಸಿದ್ಧಪಡಿಸಲಾದ ವರದಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸಲ್ಲಿಸಲಾಗುತ್ತಿದ್ದು, ಪರಿಶೀಲನಾ ಕಾರ್ಯವನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಬಯೋಮೆಟ್ರಿಕ್ ದೃಢೀಕರಣ ಹಾಗೂ ಹೊಸ ಅರ್ಜಿಗಳ ಸ್ವೀಕಾರ ಕುರಿತಂತೆ ರಾಜ್ಯ ಸರ್ಕಾರದಿಂದ ಇನ್ನೂ ಯಾವುದೇ ಅಧಿಕೃತ ಮಾರ್ಗಸೂಚಿಗಳು ಬಂದಿಲ್ಲ ಎಂದು ತಿಳಿಸಲಾಗಿದೆ. ಸರ್ಕಾರದ ನಿರ್ದೇಶನಗಳು ಬಂದ ತಕ್ಷಣ ಅವುಗಳನ್ನು ಜಾರಿ ತರಲಾಗುವುದೆಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಯೋಜನೆಯ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಭೆಯಲ್ಲಿ ವಿವರಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯ 2026-27ನೇ ಸಾಲಿನಲ್ಲಿ ಬಿಡುಗಡೆಯಾದ ಮೊದಲನೇ ಕಂತಿನಲ್ಲಿ 6,71,674 ಫಲಾನುಭವಿಗಳಿಗೆ ರೂ.1,34,33,48,000 ಅನುದಾನ ಬಿಡುಗಡೆಯಾಗಿದ್ದು, ಫಲಾನುಭವಿಗಳಿಗೆ ಪಾವತಿಯಾಗಿರುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.
ಪಂಚ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತವಾಗುವುದಿಲ್ಲ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್. ಅರುಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಸರಕಾರವು ಬಡವರು ಹಾಗೂ ಹಿಂದುಳಿದ ವರ್ಗದವರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರ ಪ್ರಯೋಜನಗಳು ನಿಜವಾದ ಅರ್ಹ ಫಲಾನುಭವಿಗಳಿಗೆ ತಲುಪುವುದು ಸಮಿತಿಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ತಾಲೂಕು ಮಟ್ಟದಲ್ಲಿ ನಡೆಯುವ ಗ್ಯಾರಂಟಿ ಯೋಜನೆಗಳ ಸಭೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಸಭೆಗೆ ಗೈರು ಹಾಜರಾದ ಅಧಿಕಾರಿಗಳ ಕುರಿತು ಜಿಲ್ಲಾ ಮಟ್ಟದ ಸಮಿತಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಇದೇ ಬೆಲೆ ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಪ್ರೊ. ಶಿವಕುಮಾರ್ ಮಾತನಾಡಿ, ವರಲಕ್ಷ್ಮಿ ಯೋಜನೆಯೆಲ್ಲಿ ಮೃತಪಟ್ಟ ಫಲಾನುಭವಿಗಳು ಹಾಗೂ ಆದಾಯ ತೆರಿಗೆ, ಜಿಎಸ್‌ಟಿ ಪಾವತಿಸುವಂತಹ ಅನರ್ಹ ಫಲಾನುಭವಿಗಳಿಗೆ ನೀಡಲಾಗುತ್ತಿರುವ ಹಣವನ್ನು ತಕ್ಷಣ ನಿಲ್ಲಿಸಬೇಕು ಎಂದು ಸೂಚಿಸಿದರು. ಅನರ್ಹರಾಗಿದ್ದರು ಯೋಜನೆಯ ಹಣ ಪಡೆದಿದ್ದರೆ, ಅಂತ ಮೊತ್ತವನ್ನು ವಸೂಲಿ ಮಾಡುವ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಗೃಹಲಕ್ಷ್ಮೀ ಯೋಜನೆಯ ಅನರ್ಹ ಫಲಾನುಭವಿಗಳ ನಿಖರ ಮಾಹಿತಿಯನ್ನು ಸಂಗ್ರಹಿಸಿ ಸಮಿತಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಸಮಿತಿ ಸೂಚಿಸಿದೆ. ಅರ್ಹರಿಗೆ ಯೋಜನೆ ಪಡೆಯುವಲ್ಲಿ ಯಾವುದೇ ತೊಂದರೆ ಎದುರಾದರೆ ತಾಲೂಕು ಮಟ್ಟದ ಅಧಿಕಾರಿಗಳು ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಹುಣಸೂರು ಬಸವಣ್ಣ ತಿಳಿಸಿದ್ದಾರೆ.
ಇದೇ ಬೇರೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪರಿಶೀಲನೆ ಕುರಿತು ಮಾತನಾಡಿದ ಜಿಲ್ಲಾ ಗ್ಯಾರಂಟಿ ಯೋಜನೆಯ ಸದಸ್ಯ ಸಾ.ಮಾ. ಯೋಗೇಶ್, ಹೊರ ರಾಜ್ಯದ ಮಹಿಳೆಯರು ಸಹ ಫಲಾನುಭವಿಗಳಾಗಿರುವ ಸಾಧ್ಯತೆ ಇದೆ. ಅಂತಹವರನ್ನು ಪತ್ತೆಹಚ್ಚಲು ಅಧಿಕಾರಿಗಳು ಕೆಳಹಂತದ ಸಿಬ್ಬಂದಿಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಅರ್ಹ ಫಲಾನುಭವಿಗಳ ಗುರುತಿಸುವಿಕೆ ಹಾಗೂ ಅನರ್ಹ ಫಲಾನುಭವಿಗಳನ್ನು ಪತ್ತೆ ಮಾಡುವ ಕುರಿತು ಚರ್ಚೆ ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭು ಸ್ವಾಮಿ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ವಿವಿಧ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Also Read:
ಕ್ಯಾಬಿನೆಟ್ ವಿಸ್ತರಣೆ ಕುತೂಹಲ: ಸಚಿವ ಸ್ಥಾನ ಕುರಿತು ಜಮೀರ್ ಅಹ್ಮದ್ ಹೇಳಿದ್ದೇನು?