Belagavi News:
ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರ ಲಾಬಿ ತೀವ್ರಗೊಂಡಿದೆ. ಈ ಬೆಳವಣಿಗೆಯ ನಡುವೆಯೇ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ತುರ್ತು ಬುಲಾವ್ ಬಂದಿದ್ದು, ಅವರು ದೆಹಲಿಗೆ ತೆರಳಿದ್ದಾರೆ.
ಮೂಲಗಳ ಪ್ರಕಾರ, ಕಾಂಗ್ರೆಸ್ ರಾಜ್ಯ ಉಸ್ತುವಾರಿ "ರಣದೀಪ್ ಸಿಂಗ್ ಸುರ್ಜೇವಾಲ" ಅವರ ಸೂಚನೆಯ ಮೇರೆಗೆ ಜಮೀರ್ ದೆಹಲಿಗೆ ತೆರಳಿದ್ದು ಕಾಂಗ್ರೆಸ್ ನಾಯಕ "ರಾಹುಲ್ ಗಾಂಧಿ" ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಈ ಭೇಟಿಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.
ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದಲ್ಲಿ ವಸತಿ ಸಚಿವರಾಗಿದ್ದ ಜಮೀರ್ ಅಹ್ಮದ್ ಖಾನ್, ಈ ಬಾರಿಯೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದಾರೆ. ಆದರೆ ಅಲ್ಪಸಂಖ್ಯಾತ ಸಮುದಾಯದ ಕೋಟಾದಲ್ಲಿ ಸಚಿವ ಸ್ಥಾನಕ್ಕಾಗಿ ಎನ್.ಎ. ಹ್ಯಾರಿಸ್, ರಿಜ್ವಾನ್ ಅರ್ಷದ್ , ಸಲೀಂ ಅಹ್ಮದ್ ಹಾಗೂ ತನ್ವೀರ್ ಸೇಠ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪೈಪೋಟಿ ನಡೆಸುತ್ತಿದ್ದಾರೆ.
ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ವಿವಾದಾತ್ಮಕ ಘಟನೆಯ ಕುರಿತು ಜಮೀರ್ ಅಹ್ಮದ್ ಖಾನ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ಹೈಕಮಾಂಡ್ ಮಟ್ಟದಲ್ಲಿ ತಮ್ಮ ಪರವಾಗಿ ವಿಶ್ವಾಸ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
ಜಮೀರ್ ಅವರ ದೆಹಲಿ ಭೇಟಿಯ ವಿಶೇಷ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚರ್ಚೆಯೇ ಅಥವಾ ಪಕ್ಷದ ಸಂಘಟನಾ ವಿಚಾರವೇ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ. ಹೈಕಮಾಂಡ್ ನೊಂದಿಗೆ ನಡೆಯುವ ಮಾತುಕತೆಯ ಬಳಿಕವೇ ಅವರ ಸಚಿವ ಸ್ಥಾನದ ಭವಿಷ್ಯ ಸ್ಪಷ್ಟವಾಗುವ ಸಾಧ್ಯತೆ ಇದೆ.
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದ್ದು, ಅದರತ್ತ ರಾಜ್ಯ ರಾಜಕೀಯದ ಗಮನ ನೆಟ್ಟಿದೆ.