BELAGAVI NEWS :
ಕೃಷ್ಣಾ ನದಿ ಪ್ರವಾಹ : ಕುಡಚಿ - ಉಗಾರಖುರ್ದ್ ಸೇತುವೆ ಮುಳುಗಡೆ, ಜಮಖಂಡಿ-ಮೀರಜ್ ಹೆದ್ದಾರಿ ಬಂದ್
ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳು ಹಾಗೂ ಕೃಷ್ಣಾ ನದಿ ಪಾತ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ ನದಿಯ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡುಚಿ ಮತ್ತು ಉಗಾರಖುರ್ದ್ ನಡುವಿನ ಸಂಪರ್ಕ ಸೇತುವೆ ಜಲಾವೃತಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಮಖಂಡಿ-ಮೀರತ್ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಸದ್ಯ ಕೃಷ್ಣಾ ನದಿಗೆ ಸುಮಾರು 1.35 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ದಾಖಲಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ. ಕುಡಚಿ-ಉಗಾರಖುರ್ದ್ ಸೇತುವೆ ಮೇಲೆ ಈಗಾಗಲೇ ಸುಮಾರು ಒಂದು ಅಡಿಯಷ್ಟು ನೀರು ಹರಿಯುತ್ತಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕ ಮತ್ತು ಮಹಾರಾಷ್ಟ್ರವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ಈ ರಾಜ್ಯ ಹೆದ್ದಾರಿಯಲ್ಲಿ ಪ್ರತಿದಿನ ನೂರಾರು ಬಸ್ ಗಳು ಹಾಗೂ ವಾಹನಗಳು ಸಂಚರಿಸುತ್ತವೆ. ಹೀಗಾಗಿ ಅಪಾಯ ತಪ್ಪಿಸುವ ಉದ್ದೇಶದಿಂದ ಕುಡುಚಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸೇತುವೆ ಎರಡು ಬದಿಯಲ್ಲಿ ಅಳವಡಿಸಿ ಸಂಚಾರವನ್ನು ಸಂಪೂರ್ಣ ಬಂದ್ ಮಾಡಿದ್ದಾರೆ.
ಕೃಷ್ಣಾ ನದಿ ನೀರಿನ ಮಟ್ಟದ ಮೇಲೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನಿಗಾ ವಹಿಸಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕೃಷ್ಣಾ ಪ್ರವಾಹದ ಹೊಡೆತ : ಕುಡಚಿ-ಐನಾಪುರ್, ಕುಡುಚಿ - ಉಗಾರಖುರ್ದ್ ಸೇತುವೆ ಜಲಾವೃತ, ಪ್ರಯಾಣಿಕರಿಗೆ ಸಂಕಷ್ಟ
ಕೃಷ್ಣಾ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಡುಚಿ-ಐನಾಪುರ್ ಹಾಗೂ ಕುಡುಚಿ - ಉಗಾರಖುರ್ದ್ ಸಂಪರ್ಕ ಸೇತುವೆಗಳು ಜಲಾವೃತಗೊಂಡಿದ್ದು, ಗಡಿ ಭಾಗದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಸೇತುವೆಗಳಲ್ಲಿ ನೀರು ಹರಿಯುತ್ತಿರುವ ಕಾರಣ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಕರ್ನಾಟಕ-ಮಹಾರಾಷ್ಟ್ರ ಸಂಪರ್ಕದ ಪ್ರಮುಖ ಮಾರ್ಗಗಳು ಬಂದ್ ಆಗಿರುವುದರಿಂದ, ವಾಹನ ಸವಾರರು ಮಹಾರಾಷ್ಟ್ರದ ಸಾಂಗ್ಲಿ ಮತ್ತು ಮೀರಜ್ ತಲುಪಲು ಇದೀಗ ಪರ್ಯಾಯ ಮಾರ್ಗಗಳನ್ನು ಬಳಸಬೇಕಾಗಿದೆ. ಇದರಿಂದ ಸುಮಾರು 50 ಕಿಲೋಮೀಟರ್ಗಳಷ್ಟು ಹೆಚ್ಚುವರಿ ದೂರ ಕ್ರಮಿಸಿ ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರಯಾಣಿಕರು ಸದ್ಯ ದರೂರ ಹಾಗೂ ಅಂಕಲಿ ಮಾರ್ಗದ ರಸ್ತೆಗಳನ್ನು ಅವಲಂಬಿಸುತ್ತಿದ್ದಾರೆ. ಕೃಷ್ಣಾ ನದಿಯ ಪ್ರವಾಹದ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗದ ಹಲವು ಪ್ರದೇಶಗಳಲ್ಲಿ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.
ನದಿ ನೀರಿನ ಮಟ್ಟ ಏರಿಕೆ, ಸೇತುವೆಗಳ ಸ್ಥಿತಿ ಮತ್ತು ಸಂಚಾರ ಪರಿಸ್ಥಿತಿಯ ಮೇಲೆ ಅಧಿಕಾರಿಗಳು ನಿರಂತರ ನಿಗ ವಹಿಸುತ್ತಿದ್ದಾರೆ. ಸಾರ್ವಜನಿಕರು ಅಪಾಯಕಾರಿ ಪ್ರದೇಶಗಳಿಗೆ ತೆರಳದೆ, ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ಬೆಳಗಾವಿಯಲ್ಲಿ ಪ್ರವಾಹ ಆತಂಕ: ಕೃಷ್ಣಾ, ದೂಧಗಂಗಾ, ವೇದಗಂಗಾ, ಘಟಪ್ರಭಾ ನದಿಗಳು ಉಕ್ಕಿ ಹರಿವು
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಬಾರಿ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆಯ ಪ್ರಮುಖ ನದಿಗಳು ಅಪಾಯದ ಮಟ್ಟದತ್ತ ಹರಿಯುತ್ತಿವೆ. ಕೃಷ್ಣ, ದೂಧಗಂಗಾ, ವೇದಗಂಗಾ ಹಾಗೂ ಘಟಪ್ರಭಾ ನದಿಗಳ ನೀರಿನ ಹರಿವು ಹೆಚ್ಚಾಗಿದ್ದು, ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ. ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ - ದತ್ತವಾಡ್ ಸಂಪರ್ಕ ಸೇತುವೆ ಈಗಾಗಲೇ ಸಂಪೂರ್ಣ ಜಲಾವೃತಗೊಂಡಿದ್ದು, ಸಂಚಾರಕ್ಕೆ ತೊಂದರೆ ಉಂಟಾಗಿದೆ.
ಕೃಷ್ಣ, ದೂಧಗಂಗಾ, ವೇದಗಂಗಾ ಮತ್ತು ಘಟಪ್ರಭಾ ನದಿಗಳ ಅಬ್ಬರದಿಂದ ಜಿಲ್ಲೆಯ ಹಲವು ಕೆಳಹಂತದ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ಕೆಲವು ಮಾರ್ಗಗಳಲ್ಲಿ ಪ್ರವಾಹ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಇತ್ತ ನಿಪ್ಪಾಣಿ ತಾಲೂಕಿನಲ್ಲಿ ಕೂಡ ಪ್ರವಾಹದ ಭೀತಿ ಹೆಚ್ಚಾಗಿದೆ. ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟ ಏರಿಕೆ ಆಗಿರುವುದರಿಂದ ಕೆಲವು ಪ್ರಮುಖ ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ನದೀ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.
ಮಳೆ ಮುಂದುವರೆದರೆ ಇನ್ನಷ್ಟು ಪ್ರದೇಶಗಳಲ್ಲಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
Also Read: