belagavi news :
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ನಿಲುವು ತಾಳಿದ್ದು, ತಪ್ಪಿತಸ್ಥರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ ನೀಡಲು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಳಿಕ ಎಕ್ಸ್ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, "ವಿದ್ಯಾರ್ಥಿಗಳ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದದ್ದು ಯಾವುದು ಇಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ಶೀಘ್ರ ಹಾಗೂ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಲು ತ್ವರಿತಗತಿ ನ್ಯಾಯಾಲಯಗಳನ್ನು ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ. ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ತಿಳಿಸಿದ್ದಾರೆ.
ಇದಲ್ಲದೆ," ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಮ್ಮ ಪ್ರಯತ್ನಗಳು ಮುಂದುವರೆಯಲಿವೆ. ನಮ್ಮ ಯುವಜನರ ಭವಿಷ್ಯಕ್ಕೆ ಹಾನಿ ಮಾಡಲು ಪ್ರಯತ್ನಿಸುವವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ" ಎಂದು ಪ್ರಧಾನಿ ಮೋದಿ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳು ಮತ್ತು ನೇಮಕಾತಿ ಪರೀಕ್ಷೆಗಳ ಪಾರದರ್ಶಕತೆ ಕುರಿತು ಆತಂಕ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ಈ ಘೋಷಣೆ ಮಹತ್ವ ಪಡೆದಿದೆ. ವಿದ್ಯಾರ್ಥಿಗಳ ವಿಶ್ವಾಸವನ್ನು ಹೆಚ್ಚಿಸಲು ಹಾಗೂ ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ನವದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಕಳೆದ ಜೂನ್ 28ರಿಂದ ಆರಂಭವಾಗಿರುವ ಈ ಹೋರಾಟಕ್ಕೆ ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಬೆಂಬಲ ಸೂಚಿಸಿದ್ದು, 'ಸಂಸತ್ ಚಲೋ' ಪ್ರತಿಭಟನೆಯೊಂದಿಗೆ ಚಳುವಳಿ ಮತ್ತಷ್ಟು ವೇಗ ಪಡೆದುಕೊಂಡಿದೆ.
ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಒತ್ತಾಯಿಸಿದ್ದು, ಪರೀಕ್ಷಾ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಸ್ಥಾನ ತ್ಯಜಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ನೀಟ್ ಪರೀಕ್ಷೆಗೆ ಸಂಬಂಧಿಸಿದ ಮೃತ ಅಭ್ಯರ್ಥಿಗಳ ಕುಟುಂಬಗಳಿಗೆ ₹ 1ಕೋಟಿ ಪರಿಹಾರ ನೀಡುವಂತೆ ಕೂಡ ಬೇಡಿಕೆ ಮುಂದಿಟ್ಟಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ, ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ವಿಷಯಗಳು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಈ ಪ್ರತಿಭಟನೆಯ ಪರಿಣಾಮ ಸಂಸತ್ ಮುಂಗಾರು ಅಧಿವೇಶನದ ಮೇಲು ಕಂಡು ಬರುತ್ತಿದೆ. ವಿದ್ಯಾರ್ಥಿಗಳ ವಿಶ್ವಾಸವನ್ನು ಮರು ಸ್ಥಾಪಿಸಲು ಕೇಂದ್ರ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚುತ್ತಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. ಜುಲೈ 20ರಂದು ನವದೆಹಲಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ವೇಳೆ ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ನಡೆಸಿದರೆಂದು ಪ್ರತಿಭಟನಾಕಾರರು ಆರೋಪಿಸಿದ್ದು, ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಅದಾಗ್ಯೂ, ಪ್ರತಿಭಟನೆಯನ್ನು ಅವರು ಮುಂದುವರಿಸಿದ್ದಾರೆ.
ವಿದ್ಯಾರ್ಥಿಗಳ ಹೋರಾಟಕ್ಕೆ ಹಲವು ವಿಪಕ್ಷ ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ. ಪ್ರತಿಭಟನಾಕಾರರ ಬೇಡಿಕೆಗೆ ಸ್ಪಂದಿಸಿ, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಹಾಗೂ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮದ ಮತ್ತಷ್ಟು ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.
ಈ ಬೆಳವಣಿಗೆಯ ನಡುವೆಯೇ, ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗೆ ಧರಣಿ ನಡೆಸಿ, ಜಂತರ್ ಮಂತರ್ ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಕ್ರಮದ ವಿರುದ್ಧ ತನಿಕೆ ನಡೆಸಬೇಕು ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ಪರೀಕ್ಷಾ ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಚರ್ಚೆಗಳು ದೇಶಾದ್ಯಂತ ತೀವ್ರಗೊಂಡಿದ್ದು, ಈ ಬೆಳವಣಿಗೆಗಳು ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿದೆ.