belagavi news :
ಮುಂಬೈ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ, ಮುಂಬೈನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಮಹಿಳಾ ಪ್ರತಿಭಟನಾಕಾರರೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ.
ವಿಡಿಯೋ ಹೊರಬಿದ್ದ ಬೆನ್ನಲ್ಲೇ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮುಂಬೈ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಸಂಸದೆ ವರ್ಷಾ ಗಾಯಕ್ವಾಡ್ ಎಕ್ಸ್ ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡು, ವಿದ್ಯಾರ್ಥಿಗಳ ನ್ಯಾಯಸಮ್ಮತ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬೆದರಿಸಲಾಗುತ್ತಿದ್ದು, ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.
" ಮಹಿಳೆಯರ ಗೌರವದ ಬಗ್ಗೆ ಮಾತನಾಡುವ ಸರ್ಕಾರವೇ ಪ್ರತಿಭಟನೆಯಲ್ಲಿ ಭಾಗವಹಿಸಿದ ಯುವತಿಯೊಂದಿಗೆ ಈ ರೀತಿಯ ವರ್ತನೆ ನಡೆಸಿರುವುದು ಖಂಡನೀಯ. ಛತ್ರಪತಿ ಶಿವಾಜಿ ಮಹಾರಾಜರನ ನಾಡಿನಲ್ಲಿ ಮಹಿಳೆಯರಿಗೆ ಈ ರೀತಿಯ ಅವಮಾನ ಆಗುತ್ತಿರುವುದು ನೋವಿನ ಸಂಗತಿ ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ ಮತ್ತೊಂದು ಪೋಸ್ಟ್ ನಲ್ಲಿ, ಮಹಿಳಾ ಪ್ರತಿಭಟನಾಕಾರಳನ್ನು ಪುರುಷ ಪೊಲೀಸ್ ಸಿಬ್ಬಂದಿ ಏಕೆ ಹಿಡಿದು ಎಳೆದರೂ? ಮಹಿಳಾ ಪೊಲೀಸ್ ಸಿಬ್ಬಂದಿಯಿಂದಲೇ ಪರಿಸ್ಥಿತಿ ನಿಭಾಯಿಸಬಹುದಾಗಿದ್ದಾಗ ಈ ರೀತಿಯ ಕ್ರಮ ಏಕೆ ಕೈಗೊಳ್ಳಲಾಯಿತು? ಎಂದು ಪ್ರಶ್ನಿಸಿ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.
ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ ವರ್ಷಾ ಗಾಯಕ್ವಾಡ್, ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಮತ್ತು ಪ್ರತಿಭಟನೆಗಳ ಕುರಿತು ಮೌನವಾಗಿದ್ದ ಸರ್ಕಾರ ಈಗ ಮಾತ್ರ ಪ್ರತಿಕ್ರಿಯಿಸುತ್ತಿದೆ ಎಂದು ಆರೋಪಿ ಆರೋಪಿಸಿದ್ದಾರೆ.
ಎನ್ಸಿಪಿ (ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಕೂಡ ಇದೇ ವಿಡಿಯೋ ಹಂಚಿಕೊಂಡು, ಘಟನೆಯಲ್ಲಿ ಕಾಣಿಸಿಕೊಂಡ ಪೊಲೀಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಗುರುವಾರ ಮುಂಬೈನ ಶಿವಾಜಿ ಪಾರ್ಕ್ ಮೈದಾನದಲ್ಲಿ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ನೀಟ್ ಅಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿದರು. ಈ ಮಧ್ಯೆ ವೈರಲ್ ವಿಡಿಯೋ ಮಹಾರಾಷ್ಟ್ರದಲ್ಲಿ ರಾಜಕೀಯ ವಾಗ್ವಾದಕ್ಕೆ ಮತ್ತಷ್ಟು ಇಂಧನ ನೀಡಿದೆ.