Belagavi News:
ಬೆಂಗಳೂರು/ಬೆಳಗಾವಿ: ಬೆಳಗಾವಿಯಲ್ಲಿ ಜುಲೈ 10 ರಿಂದ 12ರವರೆಗೆ ಮೂರು ದಿನಗಳ ಕಾಲ RSS ಪ್ರಚಾರಕರ ವಾರ್ಷಿಕ ಸಭೆ ನಡೆಯಲಿದೆ. ಸಭೆಯಲ್ಲಿ ದೇಶದಾದ್ಯಂತದ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಜನಗಣತಿ ಪ್ರಕ್ರಿಯೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಆರ್ ಎಸ್ ಎಸ್ ನ ಪ್ರಮುಖ ಸಂಘಟನಾ ಸಭೆಯಾಗಿರುವ ಈ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿವೆ.
ಈ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಕಾರ್ಯಕ್ರಮ ನಡೆಸುವುದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಬೀದಿಗಿಳಿದು ಪರೇಡ್ ಅಥವಾ ಮೆರವಣಿಗೆ ನಡೆಸುವ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಆದ್ಯತೆಯಾಗಿದ್ದು, ನಿಯಮಗಳ ಪಾಲನೆ ಕಡ್ಡಾಯ ಎಂದು ಸಚಿವರು ತಿಳಿಸಿದ್ದಾರೆ.
ಗೃಹ ಸಚಿವನಾಗಿ ಇರುವವರೆಗೆ ಆರ್ ಎಸ್ ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯವಾಗಿರುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಪರ -ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಇದರ ಬೆನ್ನೆಲ್ಲೇ ಬೆಳಗಾವಿಯಲ್ಲಿ ಆರ್ ಎಸ್ ಎಸ್ ಪ್ರಚಾರಕರ ವಾರ್ಷಿಕ ಸಭೆಯ ಆರಂಭಕ್ಕೂ ಮುನ್ನ ಸಚಿವರು ತಮ್ಮ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳ ಸಂದರ್ಭದಲ್ಲಿ ಕಾನೂನು ನಿಯಮಗಳನ್ನು ಪಾಲಿಸುವುದು ಅಗತ್ಯ ಎಂದು ಅವರು ಹೇಳಿದ್ದಾರೆ.