Belagavi News:
ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಮಳೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಅಬ್ಬರ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಬೆಂಗಳೂರು, ಬಳ್ಳಾರಿ, ಕಲಬುರಗಿ, ಗದಗ, ಹಾವೇರಿ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಹಲವೆಡೆ ಅವಾಂತರಗಳು ಸಂಭವಿಸಿವೆ.
ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಗಿದೆ. ಕೆಲವು ಕಡೆ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇನ್ನೂ ಕೆಲವೆಡೆ ಸೇತುವೆಗಳು ಕುಸಿತ ಪರಿಣಾಮ ಗ್ರಾಮಗಳ ಸಂಪರ್ಕ ಕಡಿತಗೊಂಡಿರುವ ವರದಿಗಳು ಲಭ್ಯವಾಗಿವೆ.
ನಿನ್ನೆಯಷ್ಟೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಿದ್ದು, ಜನರ ದೈನಂದಿನ ಚಟುವಟಿಕೆಗಳಿಗೆ ತೊಂದರೆ ಅನುಭವಿಸಿದ್ದಾರೆ. ಮಳೆ ನೀರು ರಸ್ತೆಗಳಿಗೆ ಹರಿದು ಬಂದ ಪರಿಣಾಮ ನಗರ ಪ್ರದೇಶಗಳಲ್ಲೂ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಜೂನ್ 9 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.
ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದು, ನದಿ, ಹಳ್ಳ ಹಾಗೂ ತಗ್ಗು ಪ್ರದೇಶಗಳ ಬಳಿ ಎಚ್ಚರಿಕೆಯಿಂದ ಇರಲು ಮನವಿ ಮಾಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಉಂಟಾದ ಅವಾಂತರಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿವೆ.
ಕೇರಳ ಹಾಗೂ ಕರ್ನಾಟಕದಲ್ಲಿ ಮುಂಗಾರು ಮಳೆ ತನ್ನ ಆರ್ಭಟ ಮುಂದುವರೆಸಿದ್ದು, ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕೇರಳದ ಜಿಲ್ಲೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಬಳ್ಳಾರಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಾಸರಗೋಡು ಜಿಲ್ಲೆಯ ಅಡೂರು ಪ್ರದೇಶದಲ್ಲಿ ನಿರಂತರ ಮಳೆಯಿಂದ ಮಣ್ಣು ಕುಸಿತ ಸಂಭವಿಸಿದೆ. ಮನೆ ಸಮೀಪ ಆಟವಾಡುತ್ತಿದ್ದ ವೇಳೆ ಆವರಣದ ಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ಮಕ್ಕಳು ಮಣ್ಣಿ ನಡಿ ಸಿಲುಕಿದ್ದರು. ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿದರು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮತ್ತೊಬ್ಬ ಮಗುವನ್ನು ರಕ್ಷಿಸಲಾಗಿದ್ದು, ಅಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ , ಧಾರಾಕಾರ ಮಳೆಗೆ ಬಳ್ಳಾರಿ ನಗರ ತತ್ತರಿಸಿದೆ. ತಡರಾತ್ರಿ ಸುಮಾರು 2 ಗಂಟೆಗಳ ಕಾಲ ಸುರಿದ ಭಾರಿ ಮಳೆಯಿಂದ ತಗ್ಗುಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ಮನೆಗಳಲ್ಲಿ ಸಂಗ್ರಹಿಸಿದ್ದ ದವಸ ಧಾನ್ಯಗಳು ಹಾಗೂ ಗೃಹ ಉಪಯೋಗಿ ವಸ್ತುಗಳು ನೀರಿನಲ್ಲಿ ಮುಳುಗಿದ್ದು, ನಿವಾಸಿಗಳು ಸಂಕಷ್ಟ ಅನುಭವಿಸಿದ್ದಾರೆ.
ಮನೆಗಳಿಗೆ ನುಗ್ಗಿದ ನೀರನ್ನು ಹೊರ ಹಾಕಲು ಕುಟುಂಬಸ್ಥರು ರಾತ್ರಿ ಪೂರ್ತಿ ಹರಸಾಹಸ ಪಟ್ಟಿದ್ದಾರೆ. ಹಲವು ಬಡಾವಣೆಗಳಲ್ಲಿ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿದೆ. ಮಳೆ ಅವಾಂತರದಿಂದ ಜನರು ಆತಂಕದಲ್ಲಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಮುಂಗಾರು ಮಳೆ ತೀವ್ರತೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜನರು ಸುರಕ್ಷಿತ ಸ್ಥಳಗಳಲ್ಲಿ ಇರಲು ಹಾಗೂ ಹವಾಮಾನ ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸಲು ಮನವಿ ಮಾಡಲಾಗಿದೆ.
ಕಲಬುರಗಿ, ಗದಗದಲ್ಲಿ ಮಳೆಯ ಅಬ್ಬರ , 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ:
ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಕಲಬುರಗಿ ಮತ್ತು ಗದಗ ಜಿಲ್ಲೆಗಳಲ್ಲಿ ಭಾರಿ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಲವು ಗ್ರಾಮಗಳು ಜಲಾವೃತಗೊಂಡಿದ್ದು ,ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೆಡಕಪಳ್ಳಿ ಗ್ರಾಮದಲ್ಲಿ ಭಾರಿ ಮಳೆಯಿಂದ ಇಪ್ಪತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಗ್ರಾಮವೇ ಕೆರೆಯಂತಾಗಿದ್ದು, ಜನರು ಮನೆಗಳಿಂದ ಹೊರಬರಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಕುಟುಂಬಗಳು ಸುರಕ್ಷತೆಗಾಗಿ ತಮ್ಮ ಮನೆಗಳನ್ನು ತೊರೆದು ಬೇರೆ ಕಡೆ ಸ್ಥಳಾಂತರಗೊಂಡಿದ್ದಾರೆ.
ಇನ್ನೊಂದೆಡೆ, ಚಿಮ್ಮನಚೋಡ ಗ್ರಾಮದ ಸಮೀಪದ ಸೇತುವೆ ಮಳೆಯಿಂದ ಕುಸಿತ ಪರಿಣಾಮ ಚಿಂಚೋಳಿ - ಭಾಲ್ಕಿ ನಡುವಿನ ರಸ್ತೆ ಸಂಪರ್ಕ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರಿಂದ ವಾಹನ ಸವಾರರು ಹಾಗೂ ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಗದಗ ಜಿಲ್ಲೆಯಲ್ಲೂ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಧಾರಾಕಾರ ಮಳೆಯಿಂದ ನಗರದ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ರಸ್ತೆಗಳೇ ಕೆರೆಯಂತಾಗಿದೆ. ಪಂಚರಹೊಂಡ ಪ್ರದೇಶದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿದು ಬಂದು ಪರಿಣಾಮವಾಗಿ ವಾರ ಸಂಚಾರ ಸ್ಥಗಿತಗೊಂಡಿದೆ.
ಮಾರುಕಟ್ಟೆ ಪ್ರದೇಶಗಳಲ್ಲಿ ತೆರಳುತ್ತಿದ್ದ ಜನರು ನೀರಿನ ನಡುವೆ ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ನಿರಂತರ ಮಳೆಯಿಂದ ಜನರಲ್ಲಿ ಆತಂಕ ಮನೆ ಮಾಡಿದ್ದು, ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಹಾಗೂ ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.
ಹಾವೇರಿ, ಬಾಗಲಕೋಟೆಯಲ್ಲಿ ಮಳೆಯ ಅಬ್ಬರ - ಸಂಕಷ್ಟದಲ್ಲಿ ಜನರು:
ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಲವಡೆ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಅಗಡಿ, ಯತ್ತಿನ ಹಳ್ಳಿ, ಬಸವನಕಟ್ಟಿ, ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿರಂತರವಾಗಿ ಭಾರಿ ಮಳೆ ಸುರಿದಿದೆ. ಮಳೆ ಹೊಡೆತಕ್ಕೆ ತಗ್ಗು ಪ್ರದೇಶಗಳ ಮನೆಗಳಲ್ಲಿ ಚರಂಡಿ ನೀರು ನುಗ್ಗಿ ಪರಿಸ್ಥಿತಿ ಹದಗೆಟ್ಟಿದೆ. ಮನೆಗಳೊಳಗಿನ ನೀರನ್ನು ಹೊರ ಹಾಕಲು ನಿವಾಸಿಗಳು ರಾತ್ರಿ ಪೂರ್ತಿ ಹರಸಾಹಸ ಪಟ್ಟಿರುವ ದೃಶ್ಯಗಳು ಕಂಡುಬಂದಿವೆ.
ಇನ್ನೊಂದೆಡೆ, ಬಾಗಲಕೋಟೆ ಜಿಲ್ಲೆಯಲ್ಲಿ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪೆರದಿದ್ದರೂ, ಕೆಲವೇ ಸಮಯದಲ್ಲಿ ತುರಿದ ಭಾರೀ ಮಳೆಯಿಂದ ಆವಾಂತರ ಉಂಟಾಗಿದೆ. ನವನಗರ ಪ್ರದೇಶದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.
ಜಿಲ್ಲಾ ಕ್ರೀಡಾಂಗಣದ ಬಳಿಯ ರಸ್ತೆಗಳು ಸೇರಿದಂತೆ ಹಲವು ಪ್ರಮುಖ ಮಾರ್ಗಗಳು ನೀರಿನಲ್ಲಿ ಮುಳಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಕಡಿಮೆ ಅವಧಿಯಲ್ಲಿ ಹೆಚ್ಚಿನ ಮಳೆ ಸುರಿದ ಪರಿಣಾಮ ನಗರ ಪ್ರದೇಶಗಳಲ್ಲಿ ಜನರು ತೀವ್ರ ತೊಂದರೆ ಅನುಭವಿಸಿದ್ದಾರೆ.
ಮುಂಗಾರು ಮಳೆಯ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಇಂತಹ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
Also Read:
ಮೆಟ್ರೋದಲ್ಲಿ ಸಂಚರಿಸಲಿರುವ ಡಿಕೆ ಶಿವಕುಮಾರ್ : ಸುಕ್ಷೇತ್ರ ಬೇಟಿಗೆ ಸಿಎಂ ಹೊಸ ನಿರ್ಧಾರ