Belagavi News :
ದಾವಣಗೆರೆ: ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಕಳೆದ ಎರಡು -ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ತುಂಗಾಭದ್ರ ನದಿ ಮೈದುಂಬಿ ಹರಿಯುತ್ತಿದೆ. ತುಂಗಾ ಅಣೆಕಟ್ಟಿನಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಬಿಟ್ಟಿರುವ ಹಿನ್ನಲೆಯಲ್ಲಿ ನದಿಯ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ.
ಇದರ ಪರಿಣಾಮ ಹರಿಹರ ತಾಲೂಕಿನ ಶ್ರೀಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕ್ಷೇತ್ರದ ಸಮೀಪದಲ್ಲಿ ಹರಿಯುವ ತುಂಗಾಭದ್ರ ನದಿ ಭೋರ್ಗರೆಯುತ್ತಿದ್ದು, ತೀರ ಪ್ರದೇಶದ ಹಲವು ಭಾಗಗಳು ಜಲಾವೃತಗೊಂಡಿವೆ.
ಉಕ್ಕಡಗಾತ್ರಿಯ ಕರಿಬಸವೇಶ್ವರ ದೇವಸ್ಥಾನದ ಸ್ನಾನಘಟ್ಟ, ಜವಳಘಟ್ಟ ಸೇರಿದಂತೆ ಹೂವು, ಹಣ್ಣು- ಕಾಯಿ ಮಾರಾಟದ ಹಲವು ಅಂಗಡಿಗಳು ನೀರಿನಲ್ಲಿ ಮುಳುಗಿವೆ. ಪರಿಸ್ಥಿತಿ ಹಿನ್ನೆಲೆಯಲ್ಲಿ ನದಿ ಪಾತ್ರದ ಪ್ರದೇಶಗಳಿಗೆ ಭಕ್ತರು ತೆರಳದಂತೆ ದೇವಸ್ಥಾನದ ಆಡಳಿತ ಮಂಡಳಿ ಸೂಚನೆ ನೀಡಿದೆ.
ಶ್ರೀಕ್ಷೇತ್ರಕ್ಕೆ ಆಗಮಿಸುವ ಭಕ್ತರು ನೀರಿಗೆ ಇಳಿಯದಂತೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ. ನದಿಯ ನೀರಿನ ಹರಿವು ಹೆಚ್ಚಿರುವ ಕಾರಣ ತೀರ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟರೆ, ನದಿ ದಂಡೆಯಲ್ಲಿರುವ ಗಣೇಶನ ದೇವಾಲಯವು ಮುಳುಗಡೆಯಾಗುವ ಸಾಧ್ಯತೆ ಇದೆ. ಅಲ್ಲದೆ ನದಿಯ ನೀರಿನ ಸೆಳೆತ ಮತ್ತಷ್ಟು ಹೆಚ್ಚಾಗುವ ಆತಂಕವಿದ್ದು, ಭಕ್ತರ ಸುರಕ್ಷತೆಯ ದೃಷ್ಟಿಯಿಂದ ದೇವಾಲಯದ ಆಡಳಿತ ಮಂಡಳಿ ಎಚ್ಚರಿಕೆ ಫಲಕ ಅಳವಡಿಸಲು ಮುಂದಾಗಿದೆ.
ಸದ್ಯ ತುಂಗಾಭದ್ರ ನದಿಯಲ್ಲಿ ನೀರಿನ ಹರಿವು ತಕ್ಕಮಟ್ಟಿಗೆ ಇದ್ದರು, ಮಳೆ ಪ್ರಮಾಣ ಹೆಚ್ಚಾಗಿ ನದಿ ಉಕ್ಕಿ ಹರಿದರೆ ಹರಿಹರ ತಾಲೂಕಿನ ನಂದಿಗುಡಿ ಕಡೆಯಿಂದ ಉಕ್ಕಡಗಾತ್ರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮತ್ತು ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇದೆ. ಇದೇ ರೀತಿ ಭದ್ರಾ ಅಣೆಕಟ್ಟಿನಿಂದ ನೀರು ಹರಿಸಿದರೆ ಫತ್ತೇಪುರ ಮತ್ತು ಉಕ್ಕಡಗಾತ್ರಿ ಸಂಪರ್ಕಿಸುವ ರಸ್ತೆ ಹಾಗೂ ಸೇತುವೆ ಕೂಡ ಜಲಾವೃತ ವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಇಂತಹ ಪರಿಸ್ಥಿತಿ ನಿರ್ಮಾಣವಾದಲ್ಲಿ ಉಕ್ಕಡಗಾತ್ರಿ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಪರ್ಯಾಯ ಮಾರ್ಗದ ಮೂಲಕ ಸುತ್ತು ಹಾಕಿಕೊಂಡು ತೆರಳಬೇಕಾದ ಅನಿವಾರ್ಯತೆ ಎದುರಾಗಬಹುದು. ಹೀಗಾಗಿ ನದಿ ಪಾತ್ರದ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇನ್ನೊಂದೆಡೆ, ತುಂಗಾಭದ್ರ ನದಿ ಮೈದುಂಬಿ ಹರಿಯುತ್ತಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಹರಿಹರ ತಾಲೂಕಿನ ಫತ್ತೇಪುರ, ಉಕ್ಕಡಗಾತ್ರಿ, ತಿಮ್ಮನಹಳ್ಳಿ, ಮಲ್ಲಪುರ ಸೇರಿದಂತೆ ಹಲವು ಗ್ರಾಮಗಳ ರೈತರು ವಿವಿಧ ಬೆಳೆಗಳನ್ನು ಬೆಳೆದಿದ್ದು, ನದಿಯಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂಬ ನಿರೀಕ್ಷೆಯಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು; ರಾಜ್ಯಾಯಾದ್ಯಂತ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಪ್ರಮುಖ ನದಿಗಳು ಹಾಗೂ ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಮೂಡಿಗೆರೆ ಮತ್ತು ಶೃಂಗೇರಿ ತಾಲೂಕು ಸೇರಿದಂತೆ ಮಲೆನಾಡಿನ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ನದಿ ತೀರದ ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮೂಡಿದೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಮೂಡಿಗೆರೆ, ಕೊಪ್ಪ, ಎನ್.ಆರ್. ಪುರ, ಶೃಂಗೇರಿ ಹಾಗೂ ಚಿಕ್ಕಮಗಳೂರು ತಾಲೂಕಿನರು ಹೋಬಳಿಗಳ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಬುಧವಾರ ರಜೆ ಘೋಷಿಸಿದೆ.
ಮೂಡಿಗೆರೆ ತಾಲೂಕಿನ ಕೂಡಿಗೆ ಗ್ರಾಮದಲ್ಲಿರುವ ಪ್ರಸಿದ್ದ ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಗಣನೀಯವಾಗಿ ಹೆಚ್ಚಾಗಿದೆ. ಹೇಮಾವತಿ, ಜಪಾವತಿ ಹಾಗೂ ಗುಪ್ತಗಾಮಿನಿ ನದಿಗಳ ಸಂಗಮವಾಗಿರುವ ಈ ಪ್ರದೇಶದಲ್ಲಿ ಬಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಜಲವೈಭವ ಕಣ್ತುಂಬಿಕೊಳ್ಳಲು ಜನರು ಆಗಮಿಸುತ್ತಿದ್ದಾರೆ. ಆದರೆ, ಹೆಚ್ಚುತ್ತಿರುವ ನೀರಿನ ಹರಿವಿನ ಹಿನ್ನೆಲೆಯಲ್ಲಿ ಎಚ್ಚರಿಕೆ ಸೂಚಿಸಲಾಗಿದೆ.
ಇನ್ನೊಂದೆಡೆ, ಭಾರತೀಯ ಹವಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕ ಕ್ರಮವಾಗಿ ಜುಲೈ 8 ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿಯೂ ಮಳೆಯ ಅಬ್ಬರ ಮುಂದುವರೆದಿದ್ದು, ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ನೀಡಲಾಗಿದೆ. ಮಳೆ ಪರಿಸ್ಥಿತಿ ಮುಂದುವರೆಯುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.