Belagavi News:
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಗಡಿ ಭಾಗವಾಗಿ ನಿಪ್ಪಾಣಿ ತಾಲೂಕಿನಲ್ಲಿ ಪ್ರವಾಹದ ಆತಂಕ ಎದುರಾಗಿದೆ. ನಿರಂತರ ಮಳೆಯಿಂದಾಗಿ ಮೂರು ಪ್ರಮುಖ ಸಂಪರ್ಕ ಸೇತುವೆಗಳು ಜಲಾವೃತಗೊಂಡಿದ್ದು, ಗ್ರಾಮಗಳ ನಡುವಿನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.
ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ದೂದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ " ಕಾರದಗಾ - ಬೋಜ್ ಸಂಪರ್ಕ ಸೇತುವೆ" ಸಂಪೂರ್ಣ ಜಲಾವೃತವಾಗಿದೆ. ಸೇತುವೆಯ ಮೇಲೆ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಸ್ಥಳೀಯರು ಪರ್ಯಾಯ ಮಾರ್ಗಗಳನ್ನು ಬಳಸುವಂತಾಗಿದೆ.
ಮಳೆ ಮುಂದುವರಿದರೆ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧಿಸಿ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜಲಾವೃತ ಸೇತುವೆಗಳನ್ನು ದಾಟದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದ್ದು, ಪರಿಸ್ಥಿತಿಯನ್ನು ಆಡಳಿತ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ.
ವೇದಗಂಗಾ ನದಿಯ ಪ್ರವಾಹದಿಂದ " ಬಾರವಾಡ- ಕನ್ನೂರ" ಹಾಗೂ ಬೋಜವಾಡಿ - ಗಜವರವಾಡಿ ಸಂಪರ್ಕ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದ ಹಲವು ಗ್ರಾಮಗಳ ನಡುವಿನ ಸಂಚಾರ ಅಸ್ತವ್ಯಸ್ತವಾಗಿದ್ದು, ಸ್ಥಳೀಯ ನಿವಾಸಿಗಳು ಪರ್ಯಾಯ ಮಾರ್ಗಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಇದರ ಜೊತೆಗೆ ಮಹಾರಾಷ್ಟ್ರದ " ರಾಜಾಪುರ- ಜುಗಳ " ಸಂಪರ್ಕ ಸೇತುವೆ ಮೇಲು ಪ್ರವಾಹದ ನೀರು ಹರಿಯುತ್ತಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು ಜನರಲ್ಲಿ ಆತಂಕ ಮೂಡಿಸಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಜಲಾವೃತ ಸೇತುವೆಗಳು ಹಾಗೂ ನದಿ - ಹಳ್ಳಗಳ ಬಳಿ ತೆರಳದಂತೆ ಮತ್ತು ಯಾವುದೇ ಕಾರಣಕ್ಕೂ ಉಕ್ಕಿ ಹರಿಯುತ್ತಿರುವ ನೀರಿನಲ್ಲಿ ಇಳಿಯದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.