belagavi news :
ಗದಗ: ಜಿಲ್ಲೆಯ ಗದಗ್ ತಾಲೂಕಿನ "ಕಣವಿ ಹೊಸೂರು" ಗ್ರಾಮದಲ್ಲಿ ಸ್ಮಶಾನದ ಕೊರತೆಯಿಂದ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಗ್ರಾಮದ ಮೃತ ಮಹಿಳೆಯ ಅಂತ್ಯಸಂಸ್ಕಾರಕ್ಕೆ ಸೂಕ್ತ ಸ್ಮಶಾನ ಇಲ್ಲದ ಕಾರಣ, ನಡುರಸ್ತೆಯಲ್ಲೇ ಶವಸಂಸ್ಕಾರ ನಡೆಸಲು ಗ್ರಾಮಸ್ಥರು ಸಿದ್ಧತೆ ನಡೆಸಿ ಪ್ರತಿಭಟನೆಗೆ ಮುಂದಾದರು.
ಗ್ರಾಮದಲ್ಲಿ ಹಲವು ವರ್ಷಗಳಿಂದ ಸ್ಮಶಾನದ ಸಮಸ್ಯೆ ಬಗೆಹರಿಯದೆ ಉಳಿದಿದ್ದು, ಈ ಕುರಿತು ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರು. ಯಾವುದೇ ಶಾಶ್ವತ ಪರಿಹಾರ ದೊರಕಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮೃತದೇಹದೊಂದಿಗೆ ರಸ್ತೆಗಿಳಿದ ಗ್ರಾಮಸ್ಥರು ಸಮಸ್ಯೆಗೆ ತಕ್ಷಣ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ನಂತರ ಮೃತ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ಗ್ರಾಮೀಣ ಪ್ರದೇಶಗಳಲ್ಲಿ ಇನ್ನು ಮೂಲಭೂತ ಸೌಲಭ್ಯಗಳ ಕೊರತೆ ಮುಂದುವರಿದಿರುವುದನ್ನು ಮತ್ತೊಮ್ಮೆ ಬೆಳಕಿಗೆ ತಂದಿದ್ದು, ಸ್ಮಶಾನ ನಿರ್ಮಾಣಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಅನಾರೋಗ್ಯದಿಂದ ಮೃತಪಟ್ಟ " ಬಸವಣ್ಣೆಮ್ಮ (46) ಅವರ ಅಂತ್ಯಸಂಸ್ಕಾರಕ್ಕೆ ಸ್ಮಶಾನದ ಜಾಗವೇ ಇಲ್ಲದ ಕಾರಣ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದುವರೆಗೆ ಗ್ರಾಮದ ರೈತರೊಬ್ಬರ ಖಾಸಗಿ ಜಮೀನಿನಲ್ಲಿ ಮೃತರ ಅಂತ್ಯಸಂಸ್ಕಾರ ನಡೆಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ನಮ್ಮ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಜಮೀನಿನ ಮಾಲೀಕರು ಸ್ಪಷ್ಟಪಡಿಸಿದ್ದರಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೃತದೇಹವನ್ನು ಗ್ರಾಮದ ಮಧ್ಯಭಾಗದ ರಸ್ತೆಗೆ ತಂದು ಕಟ್ಟಿಗೆ ಜೋಡಿಸಿ ಅಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ಸಿದ್ಧತೆ ನಡೆಸಿದರು. ಈ ಮೂಲಕ ಗ್ರಾಮದಲ್ಲಿ ಸ್ಮಶಾನದ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಡಳಿತದ ವಿರುದ್ಧ ತಮ್ಮ ಅಕ್ರೋಶವನ್ನು ಹೊರಹಾಕಿದರು.
ಗ್ರಾಮದಲ್ಲಿ ಸ್ಮಶಾನಕ್ಕೆ ಶಾಶ್ವತ ಜಾಗ ಮಂಜೂರು ಮಾಡುವಂತೆ ಕ್ಷೇತ್ರದ ಶಾಸಕ ಎಚ್.ಕೆ. ಪಾಟೀಲ್ ಹಾಗೂ ತಹಶೀಲ್ದಾರರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮೃತದೇಹದೊಂದಿಗೆ ಪ್ರತಿಭಟನೆ ನಡೆಸಿದ ಅವರು, ಜಿಲ್ಲಾಡಳಿತ ತಕ್ಷಣವೇ ಸ್ಮಶಾನಕ್ಕೆ ಸರ್ಕಾರಿ ಜಾಗ ಗುರುತಿಸಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮಸ್ಥರ ಪ್ರತಿಭಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.