Belagavi news:
ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಖಾಸಗಿ ಮಾಧ್ಯಮಯೊಂದರ ಜೊತೆ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ಬಿಜೆಪಿಯ ಮತದಾನ ಕಾರ್ಯತಂತ್ರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ಗೆಲುವಿಗೆ ಅಗತ್ಯವಿರುವಷ್ಟು ಮತಗಳು ಈಗಾಗಲೇ ಲಭ್ಯವಾಗಿದ್ದು, ಹೆಚ್ಚುವರಿ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರ್. ಅಶೋಕ್ ಸ್ಪಷ್ಟಪಡಿಸಿದ್ದು, ಮೈತ್ರಿ ರಾಜಕೀಯ ಲೆಕ್ಕಾಚಾರಗಳ ಹಿನ್ನೆಲೆಯಲ್ಲಿ ಈ ಕ್ರಮ ಮಹತ್ವ ಪಡೆದುಕೊಂಡಿದೆ. ವಿಧಾನಪರಿಷತ್ ಚುನಾವಣೆಯ ಮತದಾನದಲ್ಲಿ ಈ ತಂತ್ರ ಹೇಗೆ ಪರಿಣಾಮ ಬೀರುತ್ತದೆ ಎಂಬುದರ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ.
ಜೆಡಿಎಸ್ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಖಚಿತಪಡಿಸಿದ್ದಾರೆ. ಜೊತೆಗೆ ಬಿಜೆಪಿ ಅಭ್ಯರ್ಥಿಯ ಎರಡನೇ ಪ್ರಾಶಸ್ತ್ಯದ ಎಲ್ಲಾ ಮತಗಳನ್ನು ಜೆಡಿಎಸ್ ಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿ ಶಾಸಕರ ಮತದಾನ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಪಕ್ಷದೊಳಗಿನ ಮತದಾನ ಕ್ರಮ ಯಶಸ್ವಿಯಾಗಿ ಮುಕ್ತಾಯವಾಗಿದೆ ಎಂದು ಅಶೋಕ್ ಹೇಳಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಶಾಸಕರ ಮತದಾನ ಪ್ರಕ್ರಿಯೆ ಇನ್ನು ಮುಂದುವರೆದಿದ್ದು, ಚುನಾವಣಾ ಲೆಕ್ಕಾಚಾರಗಳ ಮೇಲೆ ಎಲ್ಲರ ಗಮನ ನೆಟ್ಟಿದೆ.
ಉಚ್ಚಾಟಿತ ಶಾಸಕರ ಕುರಿತು ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ, ಬಸವಗೌಡ ಪಾಟೀಲ್ ಯತ್ನಾಳ್ ಅವರು ತಮ್ಮನ್ನು ಎರಡು ಬಾರಿ ಸಂಪರ್ಕಿಸಿ ಬಿಜೆಪಿಗೆ ಮತ ಹಾಕುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಯತ್ನಾಳ್ ಅವರು ಮತದಾನ ಕೇಂದ್ರಕ್ಕೆ ಆಗಮಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎಂದು ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಆದರೆ ಎಸ್. ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಕುರಿತು ಪ್ರತಿಕ್ರಿಯಿಸಲು ಅಶೋಕ್ ನಿರಾಕರಿಸಿದ್ದು, "ಅವರು ಕಾಂಗ್ರೆಸ್ ಜೊತೆ ಇರುವುದರಿಂದ ಅವರ ಬಗ್ಗೆ ನೋ ಕಾಮೆಂಟ್ಸ್" ಎಂದು ಹೇಳಿದ್ದಾರೆ. ಈ ಬೆಳವಣಿಗೆ ವಿಧಾನ ಪರಿಷತ್ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳಿಗೆ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.
Also Read:
ಅಮೆರಿಕದಲ್ಲಿ ಹೊಸ ಟಿ20 ಲೀಗ್ ಶುರು: ವಿಶ್ವ ಕಪ್ ಸಮಯದಲ್ಲೇ ಕ್ರಿಕೆಟ್ ಬಿಗ್ ಶೋ!